April 27, 2024

Bhavana Tv

Its Your Channel

ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,

ಭಟ್ಕಳ: ಭಾರತ ದೇಶದಲ್ಲಿ ರಾಜ ಪ್ರಭುತ್ವವನ್ನು ತ್ಯಜಿಸಿ, ಪ್ರಜಾ ಪ್ರಭುತ್ವವನ್ನು ಸ್ಥಾಪಿಸಿದ ದಿನವಾದ ಇಂದು ಪ್ರತಿಯೊರ್ವ ಪ್ರಜೆಯೂ ಕೂಡಾ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸುವ ಪಣ ತೊಡಬೇಕಾಗಿದೆ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಕರೆ ನೀಡಿದರು.

ಅವರು ಭಟ್ಕಳ ತಾಲೂಕಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.
ಭಾರತ ದೇಶ ಇಂದು ಜಿ-೨೦ ನಾಯಕತ್ವವನ್ನು ವಹಿಸಿಕೊಂಡಿರುವ ಸಂಭ್ರಮದ ನಡುವೆ ವಿಶ್ವವೇ ಆರ್ಥಿಕ ಸಂಕಷ್ಟದಲ್ಲಿರುವಾಗ ನಾವು ವಿಶ್ವಕ್ಕೇ ಮಾದರಿಯಾಗಿದ್ದೇವೆ. ನಾವು ನಮ್ಮ ನಮ್ಮ ಕರ್ತವ್ಯಗಳನ್ನು ಅರಿತುಕೊಳ್ಳಬೇಕಾದ ಅಗತ್ಯತೆ ಇದೆ ಎಂದೂ ಅವರು ಹೇಳಿದರು. ಭಾರತದ ಪ್ರಜೆಗಳಿಗೆ ಸರ್ವವಿಧವಾದ ಸಮಾನ ಹಕ್ಕುಗಳನ್ನು, ಸಮಾನತೆಯನ್ನು ನಮ್ಮ ಸಂವಿಧಾನ ನೀಡಿದ್ದು ನಾವು ಆ ದಿಶೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಅದರ ಮಹತ್ವವನ್ನು ಕಾಪಾಡಿಕೊಂಡು ಹೋಗಬೇಕಾಗಿದೆ ಎಂದೂ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಸುನಿಲ್ ನಾಯ್ಕ, ವಿವಿಧ ಇಲಾಖೆಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳನ್ನು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿದರು. ನಮ್ಮಲ್ಲಿ ವರ್ಷದಿಂದ ವರ್ಷಕ್ಕೆ ಉತ್ತಮ ಪ್ರತಿಭೆಗಳು ಹೊರ ಹೊಮ್ಮುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದ್ದು ಇದು ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ಪ್ರತಿಯೋರ್ವ ಪ್ರಜೆಯೂ ಕೂಡಾ ಒಮ್ಮೆ ಸಂವಿಧಾನವನ್ನು ಅಧ್ಯಯನ ಮಾಡಬೇಕಾದ ಅಗತ್ಯತೆ ಇದೆ. ನಮ್ಮ ದೇಶ ವಿಶ್ವಗುರು ಆಗಬೇಕೆಂದು ಕನಸು ಕಾಣುವ ನಾವು ಕೋವಿಡ್ ಸಮಯದಲ್ಲಿ ವಿಶ್ವಕ್ಕೇ ಮಾದರಿಯಾಗುವ ಕಾರ್ಯವನ್ನು ಮಾಡಿದ್ದೇವೆ ಎಂದರು.
ವೇದಿಕೆಯಲ್ಲಿ ತಾಲೂಖಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಪುರಸಭಾ ಅಧ್ಯಕ್ಷ ಪರ್ವೇಜ್ ಕಾಶಿಮಜಿ, ಮುಖ್ಯಾಧಿಕಾರಿ ಸುರೇಶ ಎಂ.ಕೆ., ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಮಚಂದ್ರ ವರ್ಣೆಕರ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಡಿ.ವೈ.ಎಸ್.ಪಿ. ಶ್ರೀಕಾಂತ ಕೆ., ಮುಂತಾದವರು ಉಪಸ್ಥಿತರಿದ್ದರು.
ತಹಸೀಲ್ದಾರ್ ಅಶೋಕ ಭಟ್ಟ ಸ್ವಾಗತಿಸಿದರು. ಶಿಕ್ಷಕ ಶ್ರೀಧರ ಶೇಟ್ ನಿರ್ವಹಿಸಿದರು. ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕ ರವೀಂದ್ರ ವಂದಿಸಿದರು.

error: