May 19, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕು ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟ

ಕೆ.ಆರ್.ಪೇಟೆ ; ಆರೋಗ್ಯವಂತ ಜೀವನಕ್ಕೆ ಕ್ರೀಡೆಯು ಸಂಜೀವಿನಿಯಾಗಿದೆ. ಯುವಜನರು ಒತ್ತಡಗಳಿಂದ ಮುಕ್ತರಾಗಿ ಆರೋಗ್ಯವಂತ ಜೀವನ ನಡೆಸಲು ಕ್ರೀಡೆ, ಧ್ಯಾನ ಮತ್ತು ಯೋಗ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ರಾಜ್ಯದ ಯುವಜನ ಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಮನವಿ ಮಾಡಿದರು…

ಅವರು ಕೆ.ಆರ್.ಪೇಟೆ ಪಟ್ಟಣದ ಆಶೀರ್ವಾದ ಪ್ರೌಢಶಾಲೆಯ ಆವರಣದಲ್ಲಿ ನಡೆದ ಕೃಷ್ಣರಾಜಪೇಟೆ ತಾಲ್ಲೂಕು ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರಿಕೆಟ್ ಆಟವಾಡಿ, ಗುಂಡು ಎಸೆಯುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವನಾಗಿ ಕ್ರೀಡಾ ಇಲಾಖೆಗೆ ಹೊಸ ಸ್ಪರ್ಷ ನೀಡುವ ಮೂಲಕ ಕಾಯಕಲ್ಪ ನೀಡಿದ್ದೇನೆ. ಏಪ್ರಿಲ್ ತಿಂಗಳಿನಲ್ಲಿ ಖೇಲೋ ಇಂಡಿಯಾ ಅಡಿಯಲ್ಲಿ ರಾಷ್ಟ್ರ ಮಟ್ಟದ ಕ್ರೀಡಾ ಚಟುವಟಿಕೆಗಳು ನಡೆಯಲಿದ್ದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಕ್ರೀಡಾಕೂಟ ಉದ್ಘಾಟಿಸಿದರೆ ಉಪರಾಷ್ಟ್ರಪತಿಗಳಾದ ವೆಂಕಯ್ಯನಾಯ್ಡು ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ದೇಶದಾದ್ಯಂತ ೮ ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಸಚಿವ ನಾರಾಯಣಗೌಡ ಕ್ರೀಡಾ ಸಚಿವನಾಗಿ ಮಂಡ್ಯ ನಗರದ ಕ್ರೀಡಾಂಗಣದ ಅಭಿವೃದ್ಧಿಗೆ ೧೦ ಕೋಟಿ ರೂ ಅನುದಾನ ಹಾಗೂ ಕೆ.ಆರ್.ಪೇಟೆ ಪಟ್ಟಣದಲ್ಲಿ ಹೈಟೆಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ೧೪.೫೦ ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಟ್ಟಿದ್ದೇನೆ. ಕ್ರೀಡಾ ಸಚಿವನಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕ್ರೀಡಾಂಗಣಗಳ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಸಚಿವ ನಾರಾಯಣಗೌಡ ಹೇಳಿದರು.

ತಹಶೀಲ್ದಾರ್ ಎಂ.ವಿ.ರೂಪ ಮಾತನಾಡಿ ಸರ್ಕಾರಿ ನೌಕರರು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಉತ್ತಮವಾದ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು. ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಆರೋಗ್ಯ ಭಾಗ್ಯವು ಅಡಗಿದೆ ಎಂಬ ಸತ್ಯವನ್ನು ಅರಿಯಬೇಕು ಎಂದು ಹೇಳಿದರು…

ಕೃಷ್ಣರಾಜಪೇಟೆ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡಾಕೂಟದಲ್ಲಿ ಮೂಡಾ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿ ಉಪಾಧ್ಯಕ್ಷರಾದ ಕಿಕ್ಕೇರಿ ಪ್ರಭಾಕರ್, ಶೀಳನೆರೆ ಅಂಬರೀಶ್, ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು, ಪೋಲಿಸ್ ಇನ್ಸ್ ಪೆಕ್ಟರ್ ಎಂ.ಕೆ.ದೀಪಕ್, ತಾಲ್ಲೂಕು ಕ್ರೀಡಾಧಿಕಾರಿ ಜಯದೇವಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ನೌಕರರ ಸಂಘದ ಪದಾಧಿಕಾರಿಗಳಾದ ಪಿ.ಜೆ.ಕುಮಾರ್, ಆನಂದಕುಮಾರ್, ಪದ್ಮೇಶ್, ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಸ್. ಧರ್ಮಪ್ಪ, ಪೂರ್ಣಚಂದ್ರ ತೇಜಸ್ವಿ, ಮೋಹನಕುಮಾರಿ, ಲೋಕೇಶ್ವರಿ, ಮುಖಂಡರಾದ ಚಂದ್ರಮೋಹನ್, ವಿನೋದ್ ಕುಮಾರ್, ಡಿ.ಪಿ.ಪರಮೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: