April 30, 2024

Bhavana Tv

Its Your Channel

ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ -ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭರವಸೆ

ಕುಂದಾಪುರ : ನೂತನ ಸಚಿವ ಸಂಪುಟದಲ್ಲಿ ದೊರಕಿರುವ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯಲ್ಲಿ ರಾಜ್ಯದ ಜನರ ಸೇವೆ ಮಾಡಲು ಸಾಕಷ್ಟು ಅವಕಾಶಗಳಿವೆ. ದೊರೆಕಿರುವ ಅವಧಿಯಲ್ಲಿ ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಜ್ಯದ ನೂತನ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭರವಸೆ ವ್ಯಕ್ತಪಡಿಸಿದರು.
ಭಾನುವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಜೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಅವಶ್ಯಕವಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಗಂಭೀರ ಚಿಂತನೆ ನಡೆಸಲಾಗುವುದು. ಪ್ರಸ್ತುತ ಜಾರಿಯಲ್ಲಿ ಇರುವ ಇಲಾಖಾ ಸೌಲಭ್ಯಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪಾರದರ್ಶಕ ಹಾಗೂ ಸರಳೀಕರಣ ಪದ್ದತಿಗಳಿಗೆ ಪ್ರೋತ್ಸಾಹ ನೀಡಲಾಗುವುದು. ಲಭ್ಯ ಸಂಪನ್ಮೂಲಗಳ ಬಳಕೆಯ ಜತೆಯಲ್ಲಿ ಸಂಪನ್ಮೂಲ ಕ್ರೋಢಿಕರಣಕ್ಕೂ ಕಾರ್ಯಯೋಜನೆ ಹಮ್ಮಿಕೊಳ್ಳಲಾಗುವುದು. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲು ನಿರ್ದಾಕ್ಷಿಣ್ಯವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಪಕ್ಷದ ಹಿರಿಯರ, ವಿಷಯ ತಜ್ಞರ ಸಲಹೆ, ಸಹಕಾರದೊಂದಿಗೆ ಸಚಿವಾಲಯವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಶಿಷ್ಟ ವರ್ಗದವರಿಗಾಗಿ ಪ್ರತ್ಯೇಕ ಸಚಿವಾಲಯ ಆಗಿರುವುದರಿಂದ ನಮ್ಮ ಇಲಾಖಾ ವ್ಯಾಪ್ತಿಯಲ್ಲಿ ಇರುವ ಯೋಜನೆಗಳನ್ನು ಯೋಜನಾಬದ್ಧವಾಗಿ ಅನುಷ್ಠಾನಗೊಳಿಸಲಾಗುವುದು. ಬೇರೆ ಇಲಾಖೆಗಳಿಗೆ ಹೋಲಿಸಿದ್ದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಹುದ್ದೆಗಳ ಕೊರತೆ ಕಡಿಮೆ ಇದೆ. ಪ್ರಸ್ತುತ ಇರುವ ಹುದ್ದೆಗಳ ವರ್ಗವಾರು ವಿವರಗಳನ್ನು ಸಂಗ್ರಹಿಸಿ, ಅಧಿಕ ವೆಚ್ಚಕ್ಕೆ ಅವಕಾಶವಿಲ್ಲದೆ, ಅಗತ್ಯ ಸಿಬ್ಬಂದಿಗಳನ್ನು ಅವಕಾಶಕ್ಕೆ ತಕ್ಕಂತೆ ಭರ್ತಿಗೆ ಕ್ರಮ ವಹಿಸಲಾಗುವುದು. ಇಲಾಖೆ ಅಡಿಯಲ್ಲಿ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು. ಸಾಮಾಜಿಕ ಹಾಗೂ ಆರ್ಥಿಕ ಬಡತನ ಇರುವ ಯಾರೋಬ್ಬರು ವಿದ್ಯಾರ್ಜನೆಯಿಂದ ದೂರ ಉಳಿಯುವಂತಾಗಬಾರದು ಎನ್ನುವ ಕಾರಣಕ್ಕಾಗಿ ವಿದ್ಯಾಭ್ಯಾಸದ ಪ್ರೋತ್ಸಾಹಕ್ಕಾಗಿ ವಿಶೇಷ ಮುತುವರ್ಜಿ ವಹಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡುವುದನ್ನು ಇನ್ನಷ್ಟು ವ್ಯವಸ್ಥಿತವಾಗಿ ಮಾಡಲು ತಜ್ಞರ ಸಲಹೆ ಪಡೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ ಶೆಟ್ಟಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಸದಸ್ಯರಾದ ಜಯಾನಂದ ಹೋಬಳಿದಾರ, ಗಣೇಶ್ ಕಿಣಿ, ಕೆ.ಪಿ.ಶೇಖರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಇದ್ದರು.

error: